Chitradurga news|Nammajana.com|13-7-2025
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲಾ ಕೇಂದ್ರ ಚಿತ್ರದುರ್ಗ ನಗರದ ಪ್ರಮುಖ ರಸ್ತೆ ಅಗಲೀಕರಣ ಕಡ್ಡಾಯವಾಗಿ (CHITRADURGA CITY) ಆಗಲೇಬೇಕು. ಈ ನಿಟ್ಟಿನಲ್ಲಿ ಅಗತ್ಯ ಪೂರ್ವಾನುಮತಿ ಪಡೆಯುವ ಸಲುವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಚಿತ್ರದುರ್ಗ ನಗರದದಲ್ಲಿ ಹಾದುಹೋಗಿರುವ ಹಳೆಯ ಪುಣೆ-ಬೆಂಗಳೂರು ರಸ್ತೆಯನ್ನು ಅಗಲೀಕರಣಗೊಳಿಸುವ ಮತ್ತು ಅತಿಕ್ರಮ ತೆರವುಗೊಳಿಸುವ ಸಂಬಂಧ ಹಮ್ಮಿಕೊಂಡಿದ್ದ (CHITRADURGA CITY) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ನಗರದದಲ್ಲಿ ಹಾದುಹೋಗಿರುವ ಹಳೆ ಪುಣೆ-ಬೆಂಗಳೂರು ರಸ್ತೆಯನ್ನು ಚಳ್ಳಕೆರೆ ಗೇಟ್‍ನಿಂದ ಪ್ರವಾಸಿ ಮಂದಿರ ವೃತ್ತ, ಗಾಂಧಿವೃತ್ತ, ಕನಕ ವೃತ್ತ ವರೆಗಿನ ಮಾರ್ಗದಲ್ಲಿ ಅಗಲೀಕರಣಗೊಳಿಸುವ ಸಂಬಂಧ ಸರ್ಕಾರದಿಂದ ವಿವಿಧ ಪ್ರಕ್ರಿಯೆಗಳಿಗೆ ಪಡೆಯಬೇಕಿರುವ ಪೂರ್ವಾನುಮತಿಗಾಗಿ ಶೀಘ್ರ ಪ್ರಸ್ತಾವನೆ ಸಲ್ಲಿಸಬೇಕು.ಬಳಿಕ ಸರ್ಕಾರದ ಮಟ್ಟದಲ್ಲಿ ತ್ವರಿತವಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ಬೇಕಾದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಚಿತ್ರದುರ್ಗ ನಗರಸಭೆ ಮೇಲ್ದರ್ಜೆಗೇರಿಸಲು ಈಗಾಗಲೇ ಪ್ರಸ್ತಾವನೆ ಸಿದ್ದತೆ:ಡಿಸಿ
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಚಿತ್ರದುರ್ಗ ನಗರವು ದಿನೇ ದಿನೇ ಬೆಳವಣಿಗೆ ಆಗುತ್ತಿದೆ. ಚಿತ್ರದುರ್ಗ ನಗರಸಭೆ ಮೇಲ್ದರ್ಜೆಗೇರಿಸಲು ಈಗಾಗಲೇ ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ. ಚಿತ್ರದುರ್ಗ ನಗರ ಮೂಲಕ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿದ್ದು, ಜಿಲ್ಲೆಯಲ್ಲಿ ಸಂಭವಿಸುವ ಅಪಘಾತಗಳ ಸಂಖ್ಯೆಯೂ ಹೆಚ್ಚಿದೆ ಎಂದರು.
ಇತ್ತೀಚೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿಯೂ ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಇಲ್ಲಿನ ಕಿರಿದಾದ ರಸ್ತೆಗಳು, ಜನಸಂಖ್ಯೆ, ಟ್ರಾಫಿಕ್ ಸಮಸ್ಯೆ ಮುಂತಾದವುಗಳನ್ನು ಗಮನದಲ್ಲಿರಿಸಿಕೊಂಡು, ಸಮಸ್ಯೆಗಳ ನಿವಾರಣೆಗೆ ನಗರದ ಪ್ರಮುಖ ರಸ್ತೆ ಅಗಲೀಕರಣ ಕಾರ್ಯ (CHITRADURGA CITY) ಮಾಡಲೇಬೇಕಿದೆ. ರಸ್ತೆ ಅಗಲೀಕರಣ ಸಂಬಂಧ ಈಗಾಗಲೇ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: Achievement | ಯುವ ಉದ್ಯಮಿಗೆ ಜೀವನ ಕೊಟ್ಟ ಪೇಪರ್ ಬ್ಯಾಗ್ ಉದ್ಯಮ
ಸಭೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಸೋಮಶೇಖರ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
