Chitradurga News | Nammajana.com | 26-09-2025
ನಮ್ಮಜನ ನ್ಯೂಸ್ ಕಾಂ, ಚಿತ್ರದುರ್ಗ: ಸರ್ಕಾರಿ (Government employees protest) ನೌಕರರ ಮೇಲಿನ ಹಲ್ಲೆ ಮತ್ತು ದೌರ್ಜನ್ಯ ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಶುಕ್ರವಾರ ಮೌನ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: Chitradurga today Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ನಗರದ ಪ್ರವಾಸಿ ಮಂದಿರದಿಂದ ಮೌನ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಸರ್ಕಾರಿ ನೌಕರರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಭಯಮುಕ್ತ ವಾತಾವರಣದಲ್ಲಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು, ವಿನಾಕಾರಣ ಕಿರುಕುಳ ನೀಡುವ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದಜ್ಜಿ ಅವರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಸರ್ಕಾರಿ ನೌಕರರು ಈಗಲೇ ಒತ್ತಡದ ನಡುವೆ ಕೆಲಸ ಮಾಡುತ್ತಿದ್ದಾರೆ. ಕೆಲವು ಕಿಡಿಗೇಡಿಗಳು, ಸರ್ಕಾರಿ ನೌಕರರಿಗೆ ಬೆದರಿಕೆ ಹಾಕುವುದು, ಕಿರುಕುಳ ನೀಡುವಂತಹ ಕಾರ್ಯ ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ಇದರಿಂದಾಗಿ ಸರ್ಕಾರಿ ನೌಕರರು ಭಯದ ವಾತಾವರಣದಲ್ಲಿಯೇ ಕೆಲಸ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಅಕ್ರಮಗಳಿಗೆ ಸಹಕಾರ ನೀಡುವಂತೆ ಬೆದರಿಕೆ ಹಾಕುವ ದುಷ್ಕರ್ಮಿಗಳು, ಸಹಕರಿಸದೇ ಇದ್ದರೆ, ಅಂತಹ ನೌಕರರನ್ನು ವಿವಿಧ ರೀತಿಯಲ್ಲಿ ಹೆದರಿಸಿ, ಕಿರುಕುಳ ನೀಡುವುದು, ವಿನಾಕಾರಣ ನೂರಾರು ಸಂಖ್ಯೆಯಲ್ಲಿ ಮಾಹಿತಿ ಹಕ್ಕು ಅರ್ಜಿಗಳನ್ನು ಸಲ್ಲಿಸಿ ಕಾಯ್ದೆಯ ದುರುಪಯೋಗ ಮಾಡುವುದು, ನೌಕರರ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳು ಕೂಡ ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿವೆ. ಹೀಗಾಗಿ ಸರ್ಕಾರಿ ನೌಕರರು ಪ್ರಾಮಾಣಿಕತೆಯಿಂದ ಭಯಮುಕ್ತ ವಾತಾವರಣದಲ್ಲಿ ಕೆಲಸ ಮಾಡುವಂತಾಗಬೇಕು. ಈ ನಿಟ್ಟಿನಲ್ಲಿ ಬೆದರಿಕೆ ಒಡ್ಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದರು.
ಇದನ್ನೂ ಓದಿ: ST ಪಟ್ಟಿಗೆ ಅನ್ಯ ಜಾತಿ ಸೇರ್ಪಡೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ನಾಯಕ ಸಮಾಜ ಪ್ರತಿಭಟನೆ
ಇತ್ತೀಚೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಯತ್ನಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಸರ್ಕಾರಿ ದಾಖಲೆಗಳನ್ನು ಹರಿದು ಹಾಕಿರುವ ಎಂ.ಸತೀಶ್ ಕುಮಾರ್ ಎಂಬುವರನ್ನು ಬಂಧಿಸಿ, ಆತನಿಂದಾಗುವ ಮಾನಸಿಕ ಕಿರುಕುಳ ತಪ್ಪಿಸಲು ಹಾಗೂ ಸರ್ಕಾರಿ ಅಧಿಕಾರಿಗಳ ಹಾಗೂ ನೌಕರರ ತೇಜೋವಧೆ ಮಾಡುವುದನ್ನು ತಪ್ಪಿಸಲು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿದರು.
ಸತೀಶ್ ಕುಮಾರ್ ಎಂಬ ವ್ಯಕ್ತಿ ಜಿಲ್ಲೆಯಲ್ಲಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಸುಮಾರು 200ಕ್ಕೂ ಹೆಚ್ಚು ಮಾಹಿತಿ ಹಕ್ಕು ಅರ್ಜಿಗಳನ್ನು ಸಲ್ಲಿಸಿ, ಮಾಹಿತಿ ಹಾಗೂ ಹಣ ಕೊಡುವಂತೆ ಕಳೆದ ಸುಮಾರು 9-10 ತಿಂಗಳಿಂದ ಪೀಡಿಸುತ್ತಿದ್ದು, ಯಾವುದೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಣ ನೀಡದೇ ಇದ್ದಾಗ ಹತಾಶನಾಗಿ ದಾಖಲೆರಹಿತವಾಗಿ ಸರ್ಕಾರಕ್ಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಂಸದರಿಗೆ ಸುಳ್ಳು ದೂರು ಅರ್ಜಿ ಸಲ್ಲಿಸಿ, ದೂರು ಅರ್ಜಿಗಳನ್ನು ಸಲ್ಲಿಸಿರುವುದಕ್ಕೆ ಸ್ವೀಕೃತಿ ಪಡೆದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಬೆದರಿಸುತ್ತಾ ಸುಳ್ಳು ದೂರು ಅರ್ಜಿಗಳ ಮೇಲೆ, ನಿಮ್ಮನ್ನು ಅಮಾನತು ಮಾಡಿಸುವುದಾಗಿ ಹಾಗೂ ಆರೋಪಗಳನ್ನು ಸಾಬೀತುಪಡಿಸಿ ನಿಮ್ಮನ್ನು ಕೆಲಸದಿಂದ ವಜಾ ಮಾಡಿಸುತ್ತೇನೆ ಎಂದು ಬೆದರಿಕೆ ಒಡ್ಡುತ್ತಾ ಸರ್ಕಾರಿ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಸಾಧ್ಯವಾಗದೇ ಇರುವಂತಹ ವಾತಾವರಣ ಸೃಷ್ಠಿ ಮಾಡಿರುತ್ತಾನೆ ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ತೇಜೋವಧೆ ಮಾಡಿದ್ದಾರೆ ಎಂದು ದೂರಿದರು.
ಎಂ.ಸತೀಶ್ ಕುಮಾರ್ ಅಲಿಯಾಸ್ ಎಂ.ಸತೀಶ್ ನಾಯ್ಕ್ ಎಂಬ ವ್ಯಕ್ತಿಯು ಪೂರ್ವಾಗ್ರಹ ಪೀಡಿತವಾಗಿದ್ದು, ಇತ್ತೀಚೆಗೆ ಸಂಸದರ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಭೆ ಸಮಯದಲ್ಲಿ ಕೆಲವು ಪುಂಡರ ಜೊತೆ ಜಿ.ಪಂ. ಗೆ ಮುತ್ತಿಗೆ ಹಾಕಿ ಹಿರಿಯ ಅಧಿಕಾರಿಗಳ ತೇಜೋವಧೆ ಮಾಡಿರುತ್ತಾರೆ.
ಜಿಲ್ಲೆಯ ವಿವಿಧ ಸರ್ಕಾರಿ ಅಧಿಕಾರಿಗಳನ್ನು ಹಾಗೂ ನೌಕರರನ್ನು ಹೆದರಿಸಿ, ಬೆದರಿಸಿ ನಿಮ್ಮ ಮೇಲೆ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಅವರಿಂದ ಪ್ರತಿ ತಿಂಗಳು ಹಣ ವಸೂಲಿ ಮಾಡುತ್ತಿರುವುದಾಗಿ ತಿಳಿದುಬಂದಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈತನ ಗೊಡ್ಡು ಬೆದರಿಕೆ ಹಾಗೂ ಬ್ಲಾಕ್ ಮೇಲ್ ತಂತ್ರಕ್ಕೆ ಬಗ್ಗದೇ ಇದ್ದಾಗ ಹತಾಶನಾಗಿ ಪಿಡಿಒ ಟಿ.ವೀರೇಶ್ ಅವರ ಮೇಲೆ ಮರಣಾಂತಿಕ ಹಲ್ಲೆ ಮಾಡಲು ಯತ್ನಿಸಿ, ಸರ್ಕಾರಿ ಕಾಗದ ಪತ್ರಗಳು ಇರುವ ದಾಖಲೆಗಳನ್ನು ಹರಿದು ಹಾಕಿ, ಆಕ್ರೋಶಭರಿತನಾಗಿ ನಿಮ್ಮನ್ನು ಕೊಲೆ ಮಾಡುವುದಾಗಿ ಬೆದರಿಸಿರುತ್ತಾರೆ.
ಈ ಕುರಿತು ಚಿತ್ರದುರ್ಗ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈಗಾಗಲೆ ದೂರು ದಾಖಲಿಸಲಾಗಿದೆ ಎಂದು ತಿಳಿಸಿದರು.
ಸತೀಶ್ ಕುಮಾರ್ ಅಲಿಯಾಸ್ ಸತೀಶ್ ನಾಯ್ಕ್‍ರವರನ್ನು ಕೂಡಲೇ ಬಂಧಿಸಿ, ಗೂಂಡಾ ಕಾಯ್ದೆಯನ್ವಯ ರೌಡಿ ಶೀಟರ್ ಎಂದು ಪ್ರಕರಣ ದಾಖಲಿಸಬೇಕು. ಸರ್ಕಾರಿ ನೌಕರರಿಗೆ ತೊಂದರೆಯಾಗದ ರೀತಿಯಲ್ಲಿ ರಕ್ಷಣೆ ನೀಡುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿ, ಪ್ರಾಮಾಣಿಕವಾಗಿ ಜಿಲ್ಲೆಗೆ ಕೀರ್ತಿ ತರುವ ರೀತಿಯಲ್ಲಿ, ಭಯಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯ ಮಾಡಿದರು.
ಇದನ್ನೂ ಓದಿ: ಆಯುರ್ವೇದಿಕ್ ಪದ್ದತಿಗೆ ಮುಂದೆ ಉತ್ತಮ ಭವಿಷ್ಯವಿದೆ | ಎಂ.ಸಿ.ರಘುಚಂದನ್ | Ayurvedic
ಇದಕ್ಕೂ ಮುನ್ನ ರಾಜ್ಯ ಸರ್ಕಾರಿ(Government employees protest) ನೌಕರರು ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಮೌನ ಮೆರವಣಿಗೆ ನಡೆಸಿ, ಪ್ರತಿಭಟನೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಅಧ್ಯಕ್ಷ ಮಾಲತೇಶ ಮುದ್ದಜ್ಜಿ, ಜಿಲ್ಲಾ ಕಾರ್ಯದರ್ಶಿ ಆರ್.ಶ್ರೀನಿವಾಸ್, ಖಜಾಂಚಿ ಮಲ್ಲಿಕಾರ್ಜುನ್, ರಾಜ್ಯ ಪರಿಷತ್ ಸದಸ್ಯ ಎಸ್.ರಾಜಪ್ಪ, ಉಪಾಧ್ಯಕ್ಷ ಪೂಜಾರ್ ಪ್ರಕಾಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಬಸವರಾಜಪ್ಪ, ಪಿಡಿಒ ಸಂಘದ ಜಿಲ್ಲಾ ಅಧ್ಯಕ್ಷ ನಯಾಜ್ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಉಪಸ್ಥಿತರಿದ್ದರು.
